ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಪುತ್ತೂರು ನಗರದ ಉರ್ಲಾಂಡಿ ಬೈಪಾಸ್ ರಸ್ತೆಯಲ್ಲಿ ರಸ್ತೆ ಅಂಚಿನಲ್ಲಿ ನಿಲ್ಲಿಸಲಾಗಿದ್ದ ಲಾರಿಯೊಂದಕ್ಕೆ ಬೈಕೊಂದು ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಮೃತಪಟ್ಟ ಬೈಕ್ ಸವಾರ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕುಂಜೂರು ಎಂಬಲ್ಲಿನ ನಿವಾಸಿ ಸುದೀಪ್(36) ಎಂದು ತಿಳಿದು ಬಂದಿದೆ.
ಡಿಕ್ಕಿಯ ರಭಸಕ್ಕೆ ಸುದೀಪ್ ರಸ್ತೆಗೆ ಎಸೆಯಲ್ಪಟ್ಟಿದ್ದು, ಅವರ ತಲೆಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣವೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸುದೀಪ್ ತನ್ನ ಬೈಕ್ ನಲ್ಲಿ ಬಂಟ್ವಾಳ ತಾಲೂಕಿನ ನೇರಳಕಟ್ಟೆಯಲ್ಲಿರುವ ತಮ್ಮ ಸಹೋದರಿಯ ಮನೆಯ ಕಡೆಗೆ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.