ಸಿದ್ದಾಪುರ: ಅಮಾಸೆಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಆಟೋ ರಿಕ್ಷಾದಲ್ಲಿ ಹೋಗುತ್ತಿರುವ ವಿದ್ಯಾರ್ಥಿಗಳಿಗೆ ಆಟೋ ಚಾಲಕ ಹಾಗೂ ಸ್ಥಳೀಯ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಕುರಿತು ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಲಕ ಶರತ್ ಶೆಟ್ಟಿ ಎಂದಿನಂತೆ ಜು. 15ರಂದು ತನ್ನ ರಿಕ್ಷಾದಲ್ಲಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುವಾಗ ಸ್ನೇಹಿತ ಮಚ್ಚಟ್ಟು ಗ್ರಾಮದ ಪ್ರಶಾಂತ್ ನಾಯ್ಕನನ್ನು ಜೊತೆಗೆ ಕರೆದುಕೊಂಡು ಬಂದಿದ್ದನು. ಪ್ರಯಾಣದ ವೇಳೆ ಇಬ್ಬರೂ ಜೊತೆಗೂಡಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ವಿದ್ಯಾರ್ಥಿನಿಯೊಬ್ಬಳು ಶಾಲೆಯ ಮುಖ್ಯ ಶಿಕ್ಷಕರಿಗೆ ದೂರು ನೀಡಿದ್ದಳು.
ಈ ಹಿನ್ನೆಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕ ಶಶಿಧರ ಶೆಟ್ಟಿ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ವಿದ್ಯಾರ್ಥಿನಿ ಪರಿಶಿಷ್ಟ ಜಾತಿಗೆ ಸೇರಿರುವ ಕಾರಣ ಪೊಕ್ಸೊ ಜೊತೆಗೆ ದಲಿತ ದೌರ್ಜನ್ಯ ಪ್ರಕರಣವನ್ನೂ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.